ಕೊಡಗು ಜಿಲ್ಲೆಯಲ್ಲಿ ಇಂದು ಸಂಜೆ 6ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ

ಕೊಡಗು ಜಿಲ್ಲೆಯಲ್ಲಿ ತಾ. 10 ರಂದು ಸರಕಾರದ ವತಿಯಿಂದ ಆಚರಿಸಲಾಗುವ ಟಿಪ್ಪು ಜಯಂತಿಗೆ ಪರ ಹಾಗೂ ವಿರೋಧ ವ್ಯಕ್ತವಾಗುತ್ತಿರುವುದರಿಂದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು *ತಾ. 09-11-2018ರ ಸಂಜೆ 6 ಗಂಟೆಯಿಂದ 11-11-2018ರ ಬೆಳಿಗ್ಗೆ 6 ಗಂಟೆಯವರೆಗೆ* ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ದಿನಗಳಂದು ಸರಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹಪ್ರವೇಶದಂತಹ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ, ಸಮಾರಂಭ, ಮೆರವಣಿಗೆಯನ್ನು ನಡೆಸುವಂತಿಲ್ಲ. ಸಾರ್ವಜನಿಕ,/ರಾಜಕೀಯ/ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ತಡೆ ಹಾಗೂ ಮುತ್ತಿಗೆ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ, ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ ತಾ. 10-11-2018ರಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಸಂತೆ ಹಾಗೂ ಜಾತ್ರೆಗೆ ನಿಷೇಧ ಹೇರಲಾಗಿದೆ. ನಿಷೇಧಿತ ಅವಧಿಯಲ್ಲಿ 5ಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಸರಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್/ಎ.ಟಿ.ಎಂ. ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ, ಹತ್ಯಾರುಗಳನ್ನು ಹೊಂದುವುದು/ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಿಂದ ಮಾಹಿತಿ…..

Leave a Reply

Your email address will not be published. Required fields are marked *